ಸೆಪ್ಟೆಂಬರ್ 10, 2026
ಗುರುವಾರ

ನಮ್ಮನ್ನು ಅನುಸರಿಸಿ

Uttara-Kannada

ಪ್ರಾಂಶುಪಾಲರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

Pakka News Web • 9 ಸೆಪ್ಟೆಂ 2026,

ಶಿರಸಿ: ಪ್ರಾಂಶುಪಾಲರ ಕಾರ್ಯವೈಖರಿ ಹಾಗೂ ವರ್ತನೆಯಿಂದ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಟ್ಟಿದೆ ಎಂದು ಆರೋಪಿಸಿ ಬಿಳೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆಗ್ರಹಿಸಿದರು.

ಕೆಲವು ತಿಂಗಳ ಹಿಂದೆ ಕಾಲೇಜಿಗೆ ವರ್ಗಾವಣೆಯಾಗಿ ಬಂದಿರುವ ಡಾ. ಪುಷ್ಪಲತಾ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವೈಖರಿಯಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಪದೇಪದೇ ತೊಂದರೆಯಾಗುತ್ತಿದೆ. ಇದರಿಂದ ಕೆಲವರು ಕಾಲೇಜು ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ನೇರ ಪರಿಣಾಮ ವಿದ್ಯಾರ್ಥಿಗಳ ಶಿಕ್ಷಣದ ಮೇಲೂ ಬೀರುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು.

ಪ್ರಾಂಶುಪಾಲರು ವಿದ್ಯಾರ್ಥಿಗಳೊಂದಿಗೂ ಅಸಮರ್ಪಕವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳು, ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಇದರಿಂದ ಬುಧವಾರ ಬೆಳಗ್ಗೆಯೇ ತರಗತಿಗಳನ್ನು ಬಹಿಷ್ಕರಿಸಿ ಕಾಲೇಜು ಆವರಣದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ‘ಡೌನ್ ಡೌನ್ ಪ್ರಿನ್ಸಿಪಾಲ್’ ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬನವಾಸಿ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತಪ್ಪ ಕುಂಬಾರ ಅವರು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಪ್ರತಿಭಟನೆ ನಡೆಸುವ ಹಕ್ಕು ಇದ್ದರೂ, ಸಾರ್ವಜನಿಕವಾಗಿ ಪ್ರತಿಭಟನೆ ನಡೆಸಲು ಅಗತ್ಯ ಅನುಮತಿ ಪಡೆಯುವುದು ಕಾನೂನುಬದ್ಧ ಪ್ರಕ್ರಿಯೆ ಎಂದು ತಿಳಿಸಿ, ಪರಿಸ್ಥಿತಿ ಕೈಮೀರುವುದನ್ನು ತಡೆಯಲು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಪಿಎಸ್‌ಐ ಅವರ ಮನವಿಗೆ ಸ್ಪಂದಿಸಿದ ವಿದ್ಯಾರ್ಥಿಗಳು ಬುಧವಾರದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು. ಆದರೆ ಪ್ರಾಂಶುಪಾಲರ ವರ್ಗಾವಣೆ ಸೇರಿದಂತೆ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಗುರುವಾರವೂ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೀಗ ವಿದ್ಯಾರ್ಥಿಗಳ ಆರೋಪಗಳಿಗೆ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಆಡಳಿತ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250