ಕಾರವಾರ: ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಡಿಜೆ, ಬೇಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಅಧಿಕ ಶಬ್ದ ಉಂಟುಮಾಡುವ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು, 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿ.ಎನ್.ಎಸ್.ಎಸ್.) 2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರ ಬಳಸಿಕೊಂಡು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಅವರು ಸಾರ್ವಜನಿಕ ಸುವ್ಯವಸ್ಥೆ ಹಾಗೂ ಜನರ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದಾರೆ.
ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳು ಸೇರಿದಂತೆ ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯಲ್ಲಿ ಡಿಜೆ ಮತ್ತು ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇಳಿವು ರಸ್ತೆಗಳು, ಸಂಚಾರ ದಟ್ಟಣೆ ಇರುವ ಪ್ರದೇಶಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿಯೂ ಇಂತಹ ಶಬ್ದ ಸಾಧನಗಳಿಗೆ ಅವಕಾಶವಿರುವುದಿಲ್ಲ. ಇದರೊಂದಿಗೆ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಸೇರಿದಂತೆ ಹೆಚ್ಚಿನ ಶಬ್ದದ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಗಳಲ್ಲಿ ಧ್ವನಿವರ್ಧಕ ವ್ಯವಸ್ಥೆ ಬಳಸುವುದು ಅತ್ಯವಶ್ಯಕವಾಗಿದ್ದರೆ, ಆಯೋಜಕರು ಮುಂಚಿತವಾಗಿ ಪೊಲೀಸ್ ಇಲಾಖೆಯಿಂದ ಲಿಖಿತ ಹಾಗೂ ಷರತ್ತುಬದ್ಧ ಅನುಮತಿ ಪಡೆಯಬೇಕು. ಶಬ್ದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಾಗಿ ಲಿಖಿತ ಮುಚ್ಚಳಿಕೆ ನೀಡುವುದು ಕಡ್ಡಾಯವಾಗಿದ್ದು, ಆದೇಶ ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರನ್ನೇ ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
