ಅಕ್ಟೋಬರ್ 27, 2026
ಮಂಗಳವಾರ

ನಮ್ಮನ್ನು ಅನುಸರಿಸಿ

Uttara-Kannada

ಕರಾವಳಿ–ಮಲೆನಾಡಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸರ್ವಪಕ್ಷ ಪ್ರಯತ್ನ ಅಗತ್ಯ: ಚಂದ್ರಕಾಂತ ಕೊಚರೇಕರ

Pakka News Web • 23 ಸೆಪ್ಟೆಂ 2026,

ಹೊನ್ನಾವರ: ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಜನಪ್ರತಿನಿಧಿಗಳು ಹಾಗೂ ಎಲ್ಲ ರಾಜಕೀಯ ಪಕ್ಷಗಳು ಈಗಲಾದರೂ ಎಚ್ಚೆತ್ತುಕೊಂಡು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಜನರ ಬದುಕು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗದಂತೆ ತಡೆಯುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟ ಸಂಘಟನೆಗಳ ರಾಜ್ಯ ಸಮಿತಿ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಕರಾವಳಿ–ಮಲೆನಾಡು ಭಾಗದಲ್ಲಿ ಶೇ.82ರಷ್ಟು ಅರಣ್ಯ ಪ್ರದೇಶವಿದ್ದು, ಇಲ್ಲಿನ ಬಹುತೇಕ ಜನರು ತಲೆತಲಾಂತರಗಳಿಂದ ತಮ್ಮ ವಸತಿ ಹಾಗೂ ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯನ್ನು ಅವಲಂಬಿಸಿಕೊಂಡು ಬದುಕುತ್ತಿದ್ದಾರೆ. 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಅರ್ಹ ಒತ್ತುವರಿಗಳನ್ನು ಸಕ್ರಮಗೊಳಿಸಲು ಸಾಕಷ್ಟು ಅವಕಾಶಗಳಿದ್ದರೂ, ರಾಜ್ಯ ಸರ್ಕಾರ ಆ ಸೌಲಭ್ಯವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದ ಬಳಿಕವೂ ಜಿಲ್ಲೆಯ ಅನೇಕ ಅರ್ಹ ಕುಟುಂಬಗಳಿಗೆ ಭೂ ಹಕ್ಕು ಇನ್ನೂ ದೊರಕದಿರುವುದು ದುರಂತಕರ ಸಂಗತಿಯಾಗಿದೆ. ಇತ್ತೀಚೆಗೆ ರಾಜ್ಯದ ಮುಖ್ಯ ಕಾರ್ಯದರ್ಶಿಯವರೇ ಸ್ಥಳ ಮಹಜರು ಪ್ರಕ್ರಿಯೆ ಮೂಲಕ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ ಅರ್ಹರಿಗೆ ಭೂಮಿಯ ಅಧಿಭೋಗ ಹಕ್ಕು ನೀಡುವಂತೆ ಆದೇಶಿಸಿದ್ದರೂ, ಅದರ ಸಮರ್ಪಕ ಅನುಷ್ಠಾನವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ–2025ರ ಕಲಂ 199(ಸಿ) ಜಾರಿಯ ಸಂದರ್ಭದಲ್ಲಿ ಸೂಕ್ತ ಚರ್ಚೆ ಮತ್ತು ಸ್ಪಷ್ಟತೆ ಕೊರತೆಯಿದ್ದ ಪರಿಣಾಮ, ಅರಣ್ಯ, ಸರ್ಕಾರಿ, ಗಾಂವಠಾಣಾ ಹಾಗೂ ಬೆಟ್ಟ ಪ್ರದೇಶಗಳಲ್ಲಿನ ನಿವಾಸಗಳನ್ನು ತೆರಿಗೆ ಪಟ್ಟಿಯಿಂದ ಕೈಬಿಡುವ ಕುರಿತು ಹೊರಡಿಸಲಾದ ಸುತ್ತೋಲೆಯ ನಂತರ ಹಲವು ಗೊಂದಲಗಳು ಸೃಷ್ಟಿಯಾಗಿವೆ. ಈ ಬೆಳವಣಿಗೆಗಳು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಬಯಲಿಗೆಳೆಯುತ್ತಿವೆ ಎಂದು ಕೊಚರೇಕರ ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ 2005ರ ಪೂರ್ವದ ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಮಿಯ ಅಧಿಭೋಗ ಹಕ್ಕು ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವ ನಿಟ್ಟಿನಲ್ಲಿ ಅರಣ್ಯ ಹಕ್ಕು ಕಾಯ್ದೆ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದ ಕರಡು ಅಧಿಸೂಚನೆಗೆ ಅಗತ್ಯ ತಿದ್ದುಪಡಿಗಳನ್ನು ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷಗಳ ಜನಪ್ರತಿನಿಧಿಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿ ಕರೆದೊಯ್ದು ಈ ಸಮಸ್ಯೆಗಳ ಗಂಭೀರತೆಯನ್ನು ಮನವರಿಕೆ ಮಾಡಿಕೊಡಬೇಕು. ಅಲ್ಲದೆ ಪಂಚಾಯತ್ ರಾಜ್ ತಿದ್ದುಪಡಿ ಅಧಿನಿಯಮ–2025ರ ಕಲಂ 199ಸಿ(1)ಕ್ಕೆ ಅಗತ್ಯ ತಿದ್ದುಪಡಿ ತಂದು ಜನರ ಭೂ ಹಕ್ಕು, ವಾಸದ ಭದ್ರತೆ ಹಾಗೂ ಪಂಚಾಯತ್‌ಗಳ ಆದಾಯ ಎಂಬ ಮೂರು ಅಂಶಗಳ ನಡುವೆ ಸಮತೋಲನ ಸಾಧಿಸುವಂತೆ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಚಂದ್ರಕಾಂತ ಕೊಚರೇಕರ ಆಗ್ರಹಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250