ಅಕ್ಟೋಬರ್ 28, 2026
ಬುಧವಾರ

ನಮ್ಮನ್ನು ಅನುಸರಿಸಿ

Uttara-Kannada

ಪಾರದರ್ಶಕತೆ ಇಲ್ಲದ ಎಸ್ಐಆರ್‌ : ಕಾಂಗ್ರೆಸ್ ಪ್ರತಿಭಟನೆ

Pakka News Web • 28 ಸೆಪ್ಟೆಂ 2026,

ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. 

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಟಿ. ನಾಯ್ಕ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ನಡೆಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯೋಗದ ಸಂವಿಧಾನಾತ್ಮಕ ಆಶಯ ಹಾಗೂ ನಿಷ್ಪಕ್ಷಪಾತತೆಯ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಬಿಜೆಪಿ ಪರವಾಗಿ ಅನುಕೂಲವಾಗುವ ರೀತಿಯಲ್ಲಿ ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯಲ್ಲಿ ಬದಲಾವಣೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿತ್ತು.

SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿತು. ಅಲ್ಲದೆ, ಹೊಸ ಮತದಾರರ ನೋಂದಣಿ ಹಾಗೂ ಮತದಾರರ ವಿವರಗಳ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿಗಳಲ್ಲಿಯೂ ಅನಗತ್ಯ ನಿಯಮಗಳನ್ನು ವಿಧಿಸುವ ಮೂಲಕ ಅರ್ಹ ಮತದಾರರಿಗೆ ತೊಂದರೆ ಉಂಟುಮಾಡಲಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು. ಚುನಾವಣಾ ಆಯೋಗದ ಮೂವರು ಸದಸ್ಯರ ನಡುವೆ ಹಲವು ನಿರ್ಧಾರಗಳ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿವೆ ಎಂಬ ವರದಿಗಳನ್ನೂ ಉಲ್ಲೇಖಿಸಿ, ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಮತ್ತು ಸ್ವಾಯತ್ತತೆ ಕಾಪಾಡಬೇಕು ಎಂದು ಆಗ್ರಹಿಸಿದರು.

ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸದೆ ಸಂವಿಧಾನ ಮತ್ತು ಮತದಾರರ ಹಕ್ಕುಗಳನ್ನು ರಕ್ಷಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವುದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಹಾಗೂ ಅವರ ಕಾರ್ಯವೈಖರಿ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತು.

ಪ್ರತಿಭಟನೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಮಾತನಾಡಿ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮತದಾರರ ಹಕ್ಕುಗಳ ರಕ್ಷಣೆಯ ಅಗತ್ಯವನ್ನು ಒತ್ತಿಹೇಳಿದರು. ಜಿಲ್ಲೆಯ ವಿವಿಧ ತಾಲೂಕುಗಳ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250