ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಸೈಲೆನ್ಸರ್ ಸದ್ದಡಗಿಸಲು ರೆಡಿಯಾದ ಪೊಲೀಸರು!

Pakka News Web • 12 ಆಕ್ಟೋ 2026,

ಕಾರವಾರ: ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಹಾಗೂ ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ದೋಷಪೂರಿತ ಮತ್ತು ಕಾನೂನುಬಾಹಿರವಾಗಿ ಮಾರ್ಪಡಿಸಿದ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡು ಸಂಚರಿಸುವ ವಾಹನ ಸವಾರರಿಗೆ ಕಾರವಾರ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 31 ಪ್ರಕರಣಗಳನ್ನು ದಾಖಲಿಸಿದ್ದಾರೆ.

ವಾಹನಗಳಿಂದ ಅತಿಯಾದ ಶಬ್ದ ಹೊರಡಿಸುವ ದೋಷಪೂರಿತ ಹಾಗೂ ಮಾರ್ಪಡಿಸಿದ ಸೈಲೆನ್ಸರ್‌ಗಳ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ದೋಷಪೂರಿತ ಸೈಲೆನ್ಸರ್‌ಗಳ ಬಳಕೆಗೆ ಸಂಬಂಧಿಸಿದಂತೆ 7 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇತರ ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳೂ ಸೇರಿದಂತೆ ಒಟ್ಟು 31 ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ವಾಹನಗಳ ಮೂಲ ವಿನ್ಯಾಸಕ್ಕೆ ವಿರುದ್ಧವಾಗಿ ಸೈಲೆನ್ಸರ್‌ಗಳನ್ನು ಮಾರ್ಪಡಿಸುವುದು ಹಾಗೂ ನಿಗದಿತ ಶಬ್ದಮಟ್ಟದ ನಿಯಮಗಳನ್ನು ಉಲ್ಲಂಘಿಸಿ ವಾಹನಗಳನ್ನು ಚಲಾಯಿಸುವುದರಿಂದ ಶಬ್ದ ಮಾಲಿನ್ಯ ಹೆಚ್ಚುವುದಲ್ಲದೆ, ಸಾರ್ವಜನಿಕರ ನೆಮ್ಮದಿಗೂ ಧಕ್ಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಕಾನೂನುಬಾಹಿರ ಮಾರ್ಪಾಡುಗಳನ್ನು ಮಾಡಿಸಿಕೊಳ್ಳದೆ, ವಾಹನಗಳ ತಯಾರಿಕಾ ವಿನ್ಯಾಸ ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.
ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವ ರೀತಿಯಲ್ಲಿ ವಾಹನಗಳನ್ನು ಚಲಾಯಿಸುವುದು ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಇಂತಹ ಕೃತ್ಯಗಳಲ್ಲಿ ತೊಡಗುವ ವಾಹನ ಸವಾರರ ವಿರುದ್ಧ ಮುಂದಿನ ದಿನಗಳಲ್ಲಿಯೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿರಂತರ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250