ಅಕ್ಟೋಬರ್ 25, 2026
ಭಾನುವಾರ

ನಮ್ಮನ್ನು ಅನುಸರಿಸಿ

Uttara-Kannada

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಪ್ರತಿಬಂಧಕಾಜ್ಞೆ ಜಾರಿ

Pakka News Web • 17 ಆಕ್ಟೋ 2026,

ಕಾರವಾರ:ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ 2026ರ ಮತದಾನ ಸುಗಮವಾಗಿ ಜರುಗುವಂತೆ ಮಾಡಲು, ಜಿಲ್ಲೆಯಾದ್ಯಂತ ಮತದಾನ ಕೊನೆಗೊಳ್ಳುವ 48 ಗಂಟೆಗಳ ಪೂರ್ವ ಅಂದರೆ ಅಕ್ಟೋಬರ್ 21 ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23 ರ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಅದರಂತೆ ಮತಗಟ್ಟೆ ಕೇಂದ್ರಗಳ ಸುತ್ತಲಿನ 100 ಮೀಟರ್ ಪ್ರದೇಶದಲ್ಲಿ ಹಾಗೂ ಜಿಲ್ಲೆಯಾದ್ಯಂತ ಚುನಾವಣಾ ಪ್ರಕ್ರಿಯೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಮತಗಟ್ಟೆ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭಗಳನ್ನು ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಸೇರಿದಂತೆ ಯಾವುದೇ ಐದು ಜನರಿಗಿಂತ ಹೆಚ್ಚು ಜನರು ಒಟ್ಟಾಗಿ ಸೇರತಕ್ಕದ್ದಲ್ಲ. ಅಲ್ಲದೆ, ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ ಅಥವಾ ದೇಹಕ್ಕೆ ಅಪಾಯವನ್ನುಂಟುಮಾಡುವ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಕಟ್ಟುನಿಟ್ಟಾಗಿ ಪ್ರತಿಬಂಧಿಸಲಾಗಿದೆ.
ಮತಗಟ್ಟೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳು, ಬುಕ್ಸ್ಟಾಲ್ಗಳು ಹಾಗೂ ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದ್ದು, ಮತದಾನದ ದಿನದಂದು ಮತಗಟ್ಟೆಗಳ ಸುತ್ತಮುತ್ತ ಯಾವುದೇ ರೀತಿಯ ಚುನಾವಣಾ ಪ್ರಚಾರ ನಡೆಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳು, ಕ್ಷಾರಪದಾರ್ಥಗಳು, ಸ್ಫೋಟಕಗಳು ಅಥವಾ ಯಾವುದೇ ದಾಹಕ ವಸ್ತುಗಳನ್ನು ಸದರಿ ಸ್ಥಳಗಳಿಗೆ ತೆಗೆದುಕೊಂಡು ಹೋಗುವುದು, ಶೇಖರಿಸುವುದು ಹಾಗೂ ಎಸೆಯುವಂತಹ ಸಾಧನಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ.
ಮನುಷ್ಯನ ಶವಗಳು, ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಹಾಗೂ ದಹನ ಕಾರ್ಯಗಳನ್ನು ತಡೆಯಲಾಗಿದೆ. ಬಹಿರಂಗವಾಗಿ ಪೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ಸನ್ನೆ ಅಥವಾ ನಕಲಿ ಪ್ರದರ್ಶನ ನೀಡುವುದು ಹಾಗೂ ಸಾರ್ವಜನಿಕ ಸಭ್ಯತೆಗೆ ಭಂಗ ತರುವಂತಹ ಕೃತ್ಯಗಳನ್ನು ಮಾಡುವಂತಿಲ್ಲ.
ಸಾರ್ವಜನಿಕವಾಗಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳನ್ನು ಹಾಡುವುದು, ಕೂಗಾಟ ನಡೆಸುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಮತ್ತು ಪ್ರತಿಕೃತಿಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ನೈತಿಕತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಕೃತ್ಯಗಳಲ್ಲಿ ತೊಡಗಿದರೆ ಅಂತಹವರ ವಿರುದ್ಧ ಕಾನೂನುರೀತ್ಯ ಕ್ರಮ ಕೈಗೊಳ್ಳಲಾಗುವುದು. ನಿಷೇಧಿತ ಮಾರಕಾಸ್ತ್ರಗಳು ಅಥವಾ ಸ್ಫೋಟಕ ವಸ್ತುಗಳನ್ನು ಹೊಂದಿರುವವರ ವಸ್ತುಗಳನ್ನು ಕೂಡಲೇ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಈ ನಿರ್ಬಂಧಗಳು ಶವಸಂಸ್ಕಾರ, ಮದುವೆ ಹಾಗೂ ಧಾರ್ಮಿಕ ಮೆರವಣಿಗೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ, ಮದುವೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಯಾವುದೇ ಕಾರಣಕ್ಕೂ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಎಚ್ಚರಿಕೆ ವಹಿಸಬೇಕು. ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊರತುಪಡಿಸಿ, ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಮೊಬೈಲ್ ಫೋನ್, ಕಾಡ್ಲೆಸ್ ಫೋನ್ ಅಥವಾ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹಾಗೆಯೇ, ಮತದಾನದ ದಿನದಂದು ಮತಗಟ್ಟೆಗಳ ಸುತ್ತಮುತ್ತ ಯಾವುದೇ ಪ್ರಚಾರದ ಪೋಸ್ಟರ್, ಬ್ಯಾನರ್ ಅಥವಾ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಅಕ್ಟೋಬರ್ 21 ರ ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರ ಕೊನೆಗೊಳ್ಳಲಿದ್ದು (ಸೈಲೆನ್ಸ್ ಹವರ್), ಆ ಅವಧಿಯ ನಂತರ ಮತಕ್ಷೇತ್ರದ ಮತದಾರರಲ್ಲದ ಹೊರಗಿನ ವ್ಯಕ್ತಿಗಳು ಕ್ಷೇತ್ರದ ವ್ಯಾಪ್ತಿಯಿಂದ ತಕ್ಷಣವೇ ಹೊರಹೋಗಬೇಕು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್ಗಳು ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿರುವವರ ಪಟ್ಟಿಗಳನ್ನು ಪರಿಶೀಲಿಸಲು ಮತ್ತು ಹೊರಗಿನವರನ್ನು ಹೊರಹಾಕಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಕ್ಷೇತ್ರದ ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ಹೊರಗಿನಿಂದ ಬರುವ ಎಲ್ಲಾ ವಾಹನಗಳನ್ನು ಕಡ್ಡಾಯವಾಗಿ ಹಾಗೂ ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಕಲಡಿ 223ರ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು. ಈ ನಿಯಮಗಳು ಮತದಾನ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗೆ ಬಂದು ಮತ ಚಲಾಯಿಸುವ ಮತದಾರರಿಗೆ ಅನ್ವಯಿಸುವುದಿಲ್ಲ. ಆದರೆ, ಅಭ್ಯರ್ಥಿಗಳು ಮನೆಯಿಂದ ಮನೆಗೆ ತೆರಳಿ ಮತಯಾಚನೆ ಮಾಡುವುದಕ್ಕೆ (ಬಾಗಿಲಿನಿಂದ ಬಾಗಿಲಿಗೆ ಪ್ರಚಾರ) ಈ ನಿಷೇಧ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ಪ್ರಚಾರ W26
ಜಾಹೀರಾತು ಸ್ಥಳ ಲಭ್ಯವಿದೆ
300x250