ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ನಡೆದ ಮತದಾನ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಶೇ. 76.52ರಷ್ಟು ಮತದಾನ ದಾಖಲಾಗಿದೆ.
ಮತದಾನ ಆರಂಭದಿಂದಲೇ ಮತಗಟ್ಟೆಗಳಲ್ಲಿ ಪದವೀಧರ ಮತದಾರರು ಉತ್ಸಾಹದಿಂದ ಪಾಲ್ಗೊಂಡರು. ಬಿಸಿಲಿನ ನಡುವೆಯೂ ಅನೇಕರು ಸರದಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಜಿಲ್ಲೆಯಾದ್ಯಂತ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆದಿದ್ದು, ಚುನಾವಣಾ ಸಿಬ್ಬಂದಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದ್ದರು.
ಕಾರವಾರದ ಸೈಂಟ್ ಮೈಕಲ್ ಶಾಲೆಯ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ತಹಸೀಲ್ದಾರ್ ನಿಶ್ಚಲ್ ನರೋನ್ಹ ಅವರು ಇತರ ಮತದಾರರೊಂದಿಗೆ ಸರದಿಯಲ್ಲಿ ನಿಂತು ಮತ ಚಲಾಯಿಸಿದರು.
ಬೆಳಗ್ಗೆ 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ. 10.82ರಷ್ಟು ಮತದಾನ ದಾಖಲಾಗಿತ್ತು. ಬಳಿಕ ಮತದಾನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿತು. ಅಂಕೋಲ ತಹಸೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಮಧ್ಯಾಹ್ನದ ವೇಳೆಗೆ ಆವರಣದ ಹೊರಗೂ ಸರದಿ ಸಾಲು ಕಂಡುಬಂತು. ಕುಮಟಾ ತಹಸೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿಯೂ ಪದವೀಧರರು ಉತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದರು.
ಮಧ್ಯಾಹ್ನ 12 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ. 29.65ರಷ್ಟು ಮತದಾನವಾಗಿತ್ತು. ಜಿಲ್ಲೆಯ ಒಟ್ಟು 16,039 ಮತದಾರರ ಪೈಕಿ ಆ ಸಮಯದವರೆಗೆ 2,485 ಪುರುಷರು ಹಾಗೂ 2,271 ಮಹಿಳೆಯರು ಸೇರಿದಂತೆ ಒಟ್ಟು 4,756 ಮಂದಿ ಮತ ಚಲಾಯಿಸಿದ್ದರು.
ದಿನವಿಡೀ ನಡೆದ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಅಂತಿಮವಾಗಿ ಜಿಲ್ಲೆಯಲ್ಲಿ ಶೇ. 76.52ರಷ್ಟು ಮತದಾನ ದಾಖಲಾಗಿದೆ.
