ಕಾರವಾರ: ರಾಷ್ಟ್ರೀಯ ಹೆದ್ದಾರಿ-52ರ ಬಾಳೆಗುಳಿಯಿಂದ ಮಾಸ್ತಿಕಟ್ಟೆವರೆಗಿನ ರಸ್ತೆಗಳಲ್ಲಿ ಕಳಪೆ ಪ್ಯಾಚ್ವರ್ಕ್ನಿಂದ ಮತ್ತೆ ಬೃಹತ್ ಹೊಂಡಗಳು ನಿರ್ಮಾಣವಾಗಿ ವಾಹನ ಸವಾರರು ಸಂಕಷ್ಟ ಅನುಭವಿಸುತ್ತಿರುವುದನ್ನು ಖಂಡಿಸಿ, ಅಕ್ಟೋಬರ್ 25ರಂದು ಬೆಳಿಗ್ಗೆ 10 ಗಂಟೆಗೆ ಬಾಳೆಗುಳಿ ಕ್ರಾಸ್ ಬಳಿ ಪ್ರತಿಭಟನೆ ನಡೆಸಲು ಜನಶಕ್ತಿ ವೇದಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ ನಿರ್ಧರಿಸಿವೆ.
ಈ ಕುರಿತು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಪ್ರತಿಭಟನೆಯ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಅಭಿಯಂತರರು, ಅಧೀಕ್ಷಕ ಅಭಿಯಂತರರು, ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದು, ಪ್ರತಿಭಟನಾಕಾರರ ಅಹವಾಲು ಆಲಿಸಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರಿಗೆ ಮತ್ತೊಂದು ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ಮಾಹಿತಿ ರವಾನಿಸಿ, ಪ್ರತಿಭಟನಾ ಸ್ಥಳದಲ್ಲಿ ಉಪಸ್ಥಿತರಿದ್ದು ಮನವಿ ಸ್ವೀಕರಿಸುವಂತೆ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ಬಿ. ನಾಯಕ ತಿಳಿಸಿದ್ದಾರೆ.
ಇದೇ ವೇಳೆ ಜೊಯಿಡಾ ತಾಲ್ಲೂಕಿನ ಅಣಸಿ ಪಂಚಾಯಿತಿ ವ್ಯಾಪ್ತಿಯ ಅಣಸಿ–ದೂದ್ಗಾಳಿ–ಬಾಡಪೋಳಿ ರಾಜ್ಯ ಹೆದ್ದಾರಿಯ ದುಸ್ಥಿತಿಯ ಬಗ್ಗೆಯೂ ಜಿಲ್ಲಾಧಿಕಾರಿಗಳ ಗಮನ ಸೆಳೆಯಲಾಗಿದೆ. ಈ ಭಾಗದಲ್ಲಿ ಸುಮಾರು 8ರಿಂದ 10 ಕಿ.ಮೀ. ರಸ್ತೆ ಹದಗೆಟ್ಟಿದ್ದು, ದೊಡ್ಡ ದೊಡ್ಡ ಹೊಂಡಗಳಿಂದ ವಾಹನ ಸಂಚಾರ ದುಸ್ತರವಾಗಿದೆ. ಬೆಳಗಾವಿ, ಧಾರವಾಡ, ಜೊಯಿಡಾ ಹಾಗೂ ದಾಂಡೇಲಿ ಕಡೆಗೆ ಸಂಚರಿಸುವ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಕುರಿತು ಅಕ್ಟೋಬರ್ 22ರಂದು ಹಳಿಯಾಳದಲ್ಲಿ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ರಸ್ತೆ ಅಭಿವೃದ್ಧಿ ಮತ್ತು ಸಾರ್ವಜನಿಕರ ಸುರಕ್ಷತೆಯ ವಿಚಾರದಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ. ಗುಣಮಟ್ಟದ ಕಾಮಗಾರಿ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸಬೇಕೆಂಬುದು ಸಂಘಟನೆಗಳ ಆಗ್ರಹವಾಗಿದೆ.
ಬಾಳೆಗುಳಿ ಕ್ರಾಸ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ – ಕಾರವಾರದ ಜನಶಕ್ತಿ ವೇದಿಕೆಯ ಸೂರಜ್ ಕುರುಮಕರ್ ಮತ್ತು ಬೆಂಬಲಿಗರಿಂದ ಬೆಂಬಲ ವ್ಯಕ್ತವಾಗಿದೆ.
