ಕಾರವಾರ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಂದಿರುವ ಅಪರಿಚಿತ ಸಂದೇಶವೊಂದರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ದಾಳಿಯ ಬೆದರಿಕೆ ಬಂದಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ನಿರ್ದಿಷ್ಟ ಇ-ಮೇಲ್ ವಿಳಾಸವೊಂದರಿಂದ ಬಂದಿರುವ ಈ ಸಂದೇಶದಲ್ಲಿ ಕೆಲವು ರಾಜಕೀಯ ಪ್ರಸ್ತಾಪಗಳು ಹಾಗೂ ಗಂಭೀರ ಆರೋಪಗಳ ಕುರಿತು ಉಲ್ಲೇಖಿಸಲಾಗಿದ್ದು, ನ್ಯಾಯಾಲಯದ ಆವರಣದಲ್ಲಿ ವಿಧ್ವಂಸಕ ಕೃತ್ಯ ಎಸಗುವುದಾಗಿ ಎಚ್ಚರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಇ-ಮೇಲ್ನಲ್ಲಿ ತಮಿಳುನಾಡಿನ ರಾಜಕೀಯ ಮುಖಂಡರೊಬ್ಬರ ಹೆಸರು ಹಾಗೂ ಚೆನ್ನೈನ ಪತ್ರಕರ್ತರ ಕುರಿತಾದ ಕೆಲವು ಆಂಶಿಕ ವಿಚಾರಗಳನ್ನು ಪ್ರಸ್ತಾಪಿಸಿ, ಪ್ರಕರಣವೊಂದರ ಎಫ್ಐಆರ್ ದಾಖಲಾತಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಲಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಕಾರವಾರ ಪೊಲೀಸರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲಾ ನ್ಯಾಯಾಲಯಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ (BDDS) ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಇಡೀ ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದ್ದು, ಯಾವುದೇ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಸದ್ಯಕ್ಕೆ ಪರಿಸ್ಥಿತಿ ಶಾಂತಿಯುತವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ಈ ಇ-ಮೇಲ್ನ ತಾಂತ್ರಿಕ ಮೂಲ ಹಾಗೂ ಅದರ ಹಿಂದಿರುವ ಶಂಕಿತ ವ್ಯಕ್ತಿಗಳ ಪತ್ತೆಗಾಗಿ ಸೈಬರ್ ಕ್ರೈಮ್ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ.
